ಯಕ್ಷಗಾನ ಪ್ರಸಂಗಕರ್ತರಾಗಿ ಜನಪ್ರಿಯರಾಗಿರುವ ಸಂಶೋಧಕ, ಅನುವಾದಕ, ವಿಮರ್ಶಕ, ಜಾನಪದ ತಜ್ಞ, ಕವಿ, ಕಥೆಗಾರ, ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮೃತ ಸೋಮೇಶ್ವರ ಅವರು ಶನಿವಾರ (ಜ.6) ಬೆಳಗ್ಗೆ 9.15ಕ್ಕೆ ನಿಧನ ಹೊಂದಿದರು. 1935ರ ಸೆ.27ರಂದು ಕೋಟೆಕಾರು ಸಮೀಪ ಅಡ್ಯ ಎಂಬಲ್ಲಿ ಜನಿಸಿದ ಅವರಿಗೆ 88 ವರ್ಷ ವಯಸ್ಸಾಗಿತ್ತು.
ಅಮೃತ ಸೋಮೇಶ್ವರರು ಪತ್ನಿ ನರ್ಮದಾ, ಮಕ್ಕಳಾದ ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ಸೊಸೆಯಂದಿರಾದ ರಾಜೇಶ್ವರಿ, ಸತ್ಯಾ ಜೀವನ್, ಮೊಮ್ಮಕ್ಕಳಾದ ಸೃಜನ್ ಸೋಮೇಶ್ವರ ಹಾಗೂ ಸೃಷ್ಟಿ ಸೋಮೇಶ್ವರ ಅವರನ್ನ ಅಗಲಿದ್ದಾರೆ. ಕನ್ನಡ ಮತ್ತು ತುಳು ಭಾಷೆಯ ಉನ್ನತಿಗಾಗಿ ತನ್ನನ್ನು ಸಮರ್ಪಿಸಿಕೊಂಡ ಮೇರು ಸಾಹಿತಿ, ಹಿರಿಯ ವಿದ್ವಾಂಸ, ಕರಾವಳಿ ಕರ್ನಾಟಕದ ಯಕ್ಷಗಾನ, ಜಾನಪದ, ಭೂತಾರಾಧನೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆಸಿದ, ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕೃತಿಯನ್ನು ಹೊರತಂದಿದ್ದಾರೆ.
ಕಥೆ, ಸಾಹಿತ್ಯ, ಕವನ, ಸಣ್ಣ ಕಥೆ, ಕಾದಂಬರಿ,ನಾಟಕ, ವ್ಯಕ್ತಿ ಚಿತ್ರಣ, ಜನಾಂಗದ ಪರಿಚಯ, ಸಾಹಿತ್ಯ ಪರಿಚಯ, ರೇಡಿಯೋ ರೂಪಕ, ನೃತ್ಯರೂಪಕ, ಸ್ವತಂತ್ರ ಗಾದೆ, ಶಬ್ಧ ಕೋಶ, ಸಂಸ್ಕೃತಿ ಚಿಂತನ, ವಚನ ಸಾಹಿತ್ಯ, ಕುಚೋದ್ಯ ಕೋಶ, ಅಂಕಣ ಲೇಖನ,ನವಸಾಕ್ಷರರಿಗೆ ಸಾಹಿತ್ಯ, ಯಕ್ಷಗಾನ ವಿಚಾರ ವಿಮರ್ಶೆ,ಸಂಪಾದನೆ,ಸಹ ಸಂಪಾದಿತ ಹಲವು ಕೃತಿಗಳನ್ನು ಹೊರತಂದಿದ್ದರು.
ತುಳುವಿನಲ್ಲಿ ಕವನ ಸಂಗ್ರಹ, ಪಾಡ್ದನ ಸಂಗ್ರಹ, ನಾಟಕ, ಅನುವಾದಿತ ಕಾವ್ಯ, ನೃತ್ಯ ರೂಪಕ, ರೇಡಿಯೋ ರೂಪಕ, ಅನುವಾದಿತ ನಾಟಕ, ತುಳು ಜಾನಪದ ಕುರಿತಾದ ಸಂಶೋಧನೆ, ಸ್ವತಂತ್ರ ಗಾದೆ, ಭಕ್ತಿಗೀತೆ, ಭಾವಗೀತೆಗಳ ಕೃತಿಗಳನ್ನು ಹೊರತಂದಿದ್ದಾರೆ. ಅಮೃತ ಸೋಮೇಶ್ವರರು ಸಾವಿರಾರು ಶಿಷ್ಯ ಸಮುದಾಯದ ಮೆಚ್ಚುಗೆ ಪಡೆದ ಶಿಸ್ತಿನ ಪ್ರಾಧ್ಯಾಪಕರಾಗಿದ್ದರು. ನೂರಾರು ಮಂದಿ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕರು, ಮಾರ್ಗದರ್ಶಕರಾಗಿ ಗುರುತಿಸಿಕೊಂಡವರು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಾಡಿನ ಕೀರ್ತಿ ಹೆಚ್ಚಿಸಿದ ಅಮೃತರನ್ನು ಮಂಗಳೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ,ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ,ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೨೦ ನೇ ಸಾಲಿನ “ಗೌರವಶ್ರೀ” ಪ್ರಶಸ್ತಿ,ಮಣಿಪಾಲ ಅಕಾಡೆಮಿಯ ಮಾಹೆ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಯಿಂದ ಸಂಘ ಸಂಸ್ಥೆಗಳ ಸನ್ಮಾನದಿಂದ ಪುರಸ್ಕೃತರಾಗಿದ್ದರು.
ಅಚ್ಚುಮೆಚ್ಚಿನ ಪ್ರೊಫೆಸರ್:
ಪ್ರಾರಂಭಿಕ ಶಿಕ್ಷಣ ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದ ಅವರು ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ ಮಾಡಿದ್ದಾರೆ. ಆನಂತರ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ತಾವು ಓದಿದ ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ.ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ನಂತರ ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು.
ಯಕ್ಷಗಾನ ಪ್ರಸಂಗಗಳು: ಅಮರ ಶಿಲ್ಪಿ ವೀರ ಕಲ್ಕುಡ, ಘೋರ ಮಾರಕ, ಸಹಸ್ರ ಕವಚ ಮೋಕ್ಷ, ಕಾಯಕಲ್ಪ, ಅಮರ ವಾಹಿನಿ, ತ್ರಿಪುರ ಮಥನ, ಆದಿಕವಿ ವಾಲ್ಮೀಕಿ, ಚಾಲುಕ್ಯ ಚಕ್ರೇಶ್ವರ ಮುಂತಾದ ಮೂವತ್ತಕ್ಕೂ ಹೆಚ್ಚು ಕೃತಿ ರಚಿಸಿದ್ದು, ಪಾತ್ರಗಳ ರಚನೆಯಲ್ಲಿ ಹೊಸತನ ತುಂಬಿದ್ದರಿಂದ ಪ್ರಸಿದ್ಧ ಮೇಳಗಳಿಂದ ಯಕ್ಷಗಾನ ಕೃತಿಗಳಿಗೆ ನಿರಂತರ ಬೇಡಿಕೆ ಇದೆ. ‘ಯಕ್ಷಗಾನ ಕೃತಿ ಸಂಪುಟ’ ಇವರ ಜಾನಪದ ಯಕ್ಷಗಾನ ಸಂಶೋಧನೆಯ ಫಲವಾಗಿ ಮೂಡಿಬಂದ ಬಹು ಮೌಲಿಕ ಕೃತಿ.
(ಮಾಹಿತಿ: ವಿವಿಧ ಮೂಲಗಳಿಂದ)
Be the first to comment on "ಖ್ಯಾತ ಸಾಹಿತಿ, ಸಂಶೋಧಕ, ವಿದ್ವಾಂಸ, ಪ್ರಸಂಗಕರ್ತ ಡಾ. ಅಮೃತ ಸೋಮೇಶ್ವರ ಇನ್ನಿಲ್ಲ"