ಪ್ರಮುಖ ಸುದ್ದಿಗಳು

ನೇತ್ರಾವತಿ, ಗುರುಪುರ ನದಿಯಲ್ಲಿ ಜಲಮೆಟ್ರೋ, ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ – ರಾಜ್ಯ ಬಜೆಟ್ ನಲ್ಲಿ ಕರಾವಳಿಗೆ ದೊರಕಿದ್ದೇನು?

ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಜಲಸಾರಿಗೆ ಹಾಗೂ ಬಂದರು ಅಭಿವೃದ್ಧಿ ವಿಚಾರವಾಗಿ ಕರ್ನಾಟಕ ಕರಾವಳಿಗೆ ದೊರಕಿದ್ದೇನು.. ಇಲ್ಲಿದೆ ವಿವರ.

  • ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಮೂಲಸೌಕರ್ಯ ಯೋಜನೆಗಳ ಪ್ರಗತಿ ಮೇಲ್ವಿಚಾರಣೆಗೆ ಹಾಗೂ ಎದುರಾಗುವ ಅಂತರ್ ಇಲಾಖಾ ಮತ್ತು ಹಣಕಾಸಿನ ತೊಡಕುಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಲಾಗುವುದು.
  • ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು. ಬಂದರು, ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ ಹೊಂದಿದ್ದೇವೆ.
  • ರಾಜ್ಯದಲ್ಲಿ ಜಲಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆಗಳನ್ನು ಆಕರ್ಷಿಸಲು, ಕರ್ನಾಟಕ ಜಲಸಾರಿಗೆ ಅಭಿವೃದ್ಧಿ ನೀತಿಯನ್ನು ಹಾಗೂ ಒಳನಾಡು ಜಲಸಾರಿಗೆ ನಿಯಮಗಳನ್ನು ರೂಪಿಸಲಾಗುವುದು.
  • ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇವುಗಳ ಪೈಕಿ ರಾಜ್ಯದ ಪಾಲು 530 ಕೋಟಿ ರೂ.ಗಳಾಗಿದೆ.  ಮುಂದುವರೆದು, ಇನ್ನೂ 1,145 ಕೋಟಿ ರೂ. ಮೊತ್ತದ 12 ಕಾಮಗಾರಿಗಳ ವಿಸ್ತೃತ ಯೋಜನಾ ವರದಿಗಳನ್ನು ಕೇಂದ್ರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.
  • ಕರಾವಳಿ ತೀರ ಪ್ರದೇಶ ಹಾಗೂ ಬಂದರುಗಳ ಅಭಿವೃದ್ಧಿಯು ರಾಜ್ಯದ ಜಲಸಾರಿಗೆ ವಹಿವಾಟು ಹೆಚ್ಚಿಸಿ, ಉದ್ಯೋಗ ಸೃಜನೆಯ ಜೊತೆಗೆ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಈ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರವು ಬದ್ಧವಾಗಿದೆ;
  • ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು ೪,೨೦೦ ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.
  • ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು ೩೦೪೮ ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತರಾಷ್ಟ್ರೀಯ ಟೆಂಡರ್ ಅನ್ನು ಕರೆಯಲಾಗಿದೆ. 
  • ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು ಬರ್ತ್ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.
  • ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ.
  • ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ.
  • ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುವುದು.
  • ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
  • ಳೆ ಮಂಗಳೂರು ಮತ್ತು ಹಂಗಾರಕಟ್ಟೆ ಬಂದರುಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಹಡಗು ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಈ ವಲಯದಲ್ಲಿ ಇನ್ನೂ ಹೆಚ್ಚು ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಲಾಗುವುದು.
  • ಮೂಲಸೌಕರ್ಯ ಅಭಿವೃದ್ದಿ ಇಲಾಖೆಯಡಿಯಲ್ಲಿ ಕಾರ್ಯಸಾಧ್ಯತಾ ವರದಿಗಳ ತಯಾರಿಕೆಗಾಗಿ Karnataka Infrastructure Project Development Fund ಅನ್ನು (KIPDF) ಸ್ಥಾಪಿಸಲಾಗಿದ್ದು, ಇದನ್ನು ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಲಾಗುವುದು ಮತ್ತು ಈ ಕೆಳಕಂಡ ಯೋಜನೆಗಳ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ನುರಿತ ಸಂಸ್ಥೆಗಳನ್ನು (Transaction Advisor) ನೇಮಿಸಿಕೊಳ್ಳಲಾಗುವುದು.
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರನ್ನು (ICTP) ಅಭಿವೃದ್ಧಿಪಡಿಸಲು ಐ.ಐ.ಟಿ. ಮದ್ರಾಸ್ ಸಹಯೋಗದೊಂದಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
  • ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಅನ್ನು ತಯಾರಿಸಲಾಗುವುದು.
  • ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
  • ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ದೃಷ್ಟಿಯಿಂದ 1600 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ;
  • ಮೈಸೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಸ್ವಾಧೀನಕ್ಕೆ 126 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಹಾಗೂ ಪ್ರಸಕ್ತ ಸಾಲಿನಲ್ಲಿ ಬಾಕಿ 43 ಕೋಟಿ ರೂ. ಬಿಡುಗಡೆಗೊಳಿಸಿ, ಕಾಮಗಾರಿ ಪ್ರಾರಂಭಕ್ಕೆ ಕ್ರಮ ವಹಿಸಲಾಗುವುದು.
  • ವಿಜಯಪುರದಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಕಾರ್ಯಾಚರಣೆ ಪ್ರಾರಂಭವಾಗಲಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಗೆ 94 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
  • ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 2023-24ನೇ ಸಾಲಿನಲ್ಲಿ 55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬಾಕಿ ಇರುವ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.
  • 220 ಕೋಟಿ ರೂ. ವೆಚ್ಚದ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು. 
  • ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
  • ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ಸಿಗ್ನೇಚರ್ ಬಿಸಿನೆಸ್ ಪಾರ್ಕ್ನಿಂದ ಹಣಕಾಸು, ಉದಯೋನ್ಮುಖ ತಂತ್ರಜ್ಞಾನ ವಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳಿಗೆ ಉತ್ತೇಜನ ದೊರೆಯಲಿದೆ. ಒಟ್ಟು 817 ಕೋಟಿ ರೂ. ಯೋಜನಾ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಮುಂದಿನ ದಿನಗಳಲ್ಲಿ 5,000 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ನಿರೀಕ್ಷೆ ಇದೆ.
  • ರಾಜ್ಯದಲ್ಲಿ ರೈಲ್ವೆ ಇಲಾಖೆಯೊಂದಿಗೆ ವೆಚ್ಚ ಹಂಚಿಕೆ ಆಧಾರದಲ್ಲಿ 12,147 ಕೋಟಿ ರೂ.ಗಳ 9 ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ.
  • ಈ ಯೋಜನೆಯ ಕಾಮಗಾರಿಗಳು ಹಾಗೂ ಭೂಸ್ವಾಧೀನಕ್ಕಾಗಿ 9,915 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಭರಿಸಲಿದೆ.  2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ರೈಲ್ವೆ ಯೋಜನೆಗಳಿಗಾಗಿ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪಾಲನ್ನು ಕ್ಷಿಪ್ರಗತಿಯಲ್ಲಿ ಪಡೆದು ಆದ್ಯತೆಯನುಸಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. 
  • ರಾಜ್ಯದ ಮೂಲಸೌಕರ್ಯ ಯೋಜನೆಗಳನ್ನು ಖಾಸಗಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ಪಿ.ಪಿ.ಪಿ. ನೀತಿ-2018ರ ಮಧ್ಯಂತರ ಪರಿಷ್ಕರಣೆಯನ್ನು ಮಾಡಲಾಗುವುದು.
  • ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಎಲ್ಲಾ ಪಿ.ಪಿ.ಪಿ. ಮಾದರಿಯ ಯೋಜನೆಗಳ ಮಾಹಿತಿ ಸಂಗ್ರಹಣೆ, ಮೇಲ್ವಿಚಾರಣೆ ಮತ್ತು ಪರಿಶೀಲನೆಗಾಗಿ ತಂತ್ರಜ್ಞಾನ ಆಧಾರಿತ ಮಾಹಿತಿ ನಿರ್ವಹಣಾ ವ್ಯವಸ್ಥೆಯನ್ನು (Information Management System) ಅಳವಡಿಸಲಾಗುವುದು.
  • ರಾಜ್ಯದ ತೆರಿಗೆಯೇತರ ರಾಜಸ್ವ ಸಂಗ್ರಹದ ಸಾಮರ್ಥ್ಯದ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಆಸ್ತಿ ನಗದೀಕರಣದ ಅವಕಾಶಗಳನ್ನು ಗುರುತಿಸಲು ಹಾಗೂ ಈ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ವಿಧಾನವನ್ನು ರೂಪಿಸಲು ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ