ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು.
ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಹಿರಿಯ ರಾಜಕಾರಣಿ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದುಕೊಂಡು ಬಳಿಕ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಕಾಂಗ್ರೆಸ್ ರಾಜ್ಯ ಚುನಾವಣಾ ಉಸ್ತುವಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಜಿಲ್ಲಾ ಚುನಾವಣಾ ಉಸ್ತುವಾರಿ ಬಿ. ರಮಾನಾಥ ರೈ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೊಜಾ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕ ಜೆ.ಆರ್. ಲೋಬೊ, ವಿಜಯ್ ಕುಮಾರ್ ಶೆಟ್ಟಿ, ಡಾ. ರಘು, ಇನಾಯತ್ ಆಲಿ, ರಕ್ಷಿತ್ ಶಿವರಾಮ್, ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು.