ಬಂಟ್ವಾಳ

ಹೆದ್ದಾರಿ ಕಾಮಗಾರಿ ವಿಳಂಬ: ಎಸ್.ಡಿ.ಪಿ.ಐ.ನಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ರಸ್ತೆ ತಡೆ ಪ್ರತಿಭಟನೆ

ಬಿ.ಸಿ.ರೋಡ್ ಅಡ್ಡಹೊಳೆ ರಸ್ತೆ ಕಾಮಗಾರಿಯಲ್ಲಿ ಬಿ.ಸಿ.ರೋಡ್ ನಿಂದ ಮಾಣಿವರೆಗಿನ ಕೆಲಸಕಾರ್ಯಗಳು ವಿಳಂಬವಾಗಿ ನಡೆಯುತ್ತಿವೆ ಎಂದು ಆರೋಪಿಸಿ ಎಸ್.ಡಿ.ಪಿ.ಐ. ವತಿಯಿಂದ ಗುರುವಾರ ಬಿ.ಸಿ.ರೋಡ್ ಸರ್ಕಲ್ ಬಳಿ ರಸ್ತೆ ತಡೆ ಪ್ರತಿಭಟನೆ ನಡೆದಿದೆ.

ಜಾಹೀರಾತು

ಪ್ರತಿಭಟನೆ

ಹೆದ್ದಾರಿ ಕಾಮಗಾರಿ ವೇಳೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.)ನ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಗುರುವಾರ ಬೆಳಗ್ಗೆ ಹೆದ್ದಾರಿ ತಡೆದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸಮೀಪ ಪ್ರತಿಭಟನೆ ನಡೆಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಎಸ್ ಎಚ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಸರ್ಕಾರಕ್ಕೆ ಶಾಪ ಹಾಕುತ್ತಾ ಮೌನವಾಗಿ ಉಳಿಯುವ ಬದಲು ಈ ಅವ್ಯವಸ್ಥೆ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕು ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿ ವಿಚಾರವಾಗಿ ಪ್ರಾಧಿಕಾರ ಕಡೆಗಣಿಸುತ್ತಿದ್ದು, ದೇಶದ ಇತರೆಡೆ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿರುವಾಗ ಜಿಲ್ಲೆಗೆ ತಾರತಮ್ಯವೇಕೆ ಎಂದು ಪ್ರಶ್ನಿಸಿದರು.

ಪುರಸಭೆ ಉಪಾಧ್ಯಕ್ಷ ಮೂನಿಷ್ ಆಲಿ ಮಾತನಾಡಿ ರಸ್ತೆ ಕಾಮಗಾರಿ ಮಾಡುವಾಗ ಕೆಲವೊಂದು ಮಾನದಂಡಗಳನ್ನು ಪಾಲಿಸಬೇಕು, ಅದರಲ್ಲಿ ಮುಖ್ಯವಾಗಿ ವಾಹನ ಸುಗಮ ಸಂಚಾರಕ್ಕೆ ಸರ್ವಿಸ್ ರಸ್ತೆ ಮಾಡದೇ ಜನರನ್ನು ವಂಚಿಸುತ್ತಿದೆ ಎಂದರು.

ಮನವಿ ಸ್ವೀಕರಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಥವಾ ಕೆಎನ್ ಆರ್ ಸಂಸ್ಥೆಯ ಇಂಜಿನಿಯರ್ ಸ್ಥಳಕ್ಕೆ ಆಗಮಿಸಿ ಮನವಿಯನ್ನು ಸ್ವೀಕರಿಸಬೇಕೆಂದು ಆಗ್ರಹಿಸಿ ರಸ್ತೆ ತಡೆ ನಡೆಸಲಾಯಿತು. ಬಳಿಕ ಇಂಜಿನಿಯರ್ ಬಂದು ಮನವಿ ಸ್ವೀಕರಿಸಿದ ನಂತರ ಸಮಾರೋಪ ಭಾಷಣ ಮಾಡಿದ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಎಸ್ ಎಚ್ 20 ದಿವಸಗಳ ಒಳಗೆ ಸರ್ವಿಸ್ ರಸ್ತೆಯನ್ನು ಡಾಮರೀಕರಣ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಬೇಡಿಕೆ ಈಡೇರಿಕೆ ಆಗುವವರೆಗೂ ರಸ್ತೆ ತಡೆ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ,‌ ಶಾಕೀರ್ ಅಳಕೆಮಜಲು‌, ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಮುಷ್ತಾಕ್ ತಲಪಾಡಿ,ಕೊಳ್ನಾಡು ಬ್ಲಾಕ್ ಅಧ್ಯಕ್ಷರಾದ ಕಲಂದರ್ ಪರ್ತಿಪ್ಪಾಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರ್,‌ ಕಲ್ಲಡ್ಕ ಬ್ಲಾಕ್ ಅಧ್ಯಕ್ಷರಾದ ಸತ್ತಾರ್ ಕಲ್ಲಡ್ಕ, ಸರಪಾಡಿ ಬ್ಲಾಕ್ ಅಧ್ಯಕ್ಷರಾದ ಹೈದರ್ ಕಾವಳಕಟ್ಟೆ, ಬಂಟ್ವಾಳ ಪುರಸಭಾ ಸಮಿತಿ ಉಪಾಧ್ಯಕ್ಷ ಯೂಸುಫ್ ಆಲಡ್ಕ, ಪಕ್ಷದ ಕಾರ್ಯಕರ್ತರು,‌ ಮಹಿಳೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts