ಫರಂಗಿಪೇಟೆ ಸಮೀಪ ಸುಜೀರು ಮತ್ತು ತುಂಬೆ ದೇವಸ್ಥಾನಗಳಿಗೆ ಕಳ್ಳರು ನುಗ್ಗಿದ್ದಾರೆ. ಸೋಮವಾರ ಮುಂಜಾನೆ ಸುಜೀರು ಎಂಬಲ್ಲಿರುವ ರವಳನಾಥ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದರೆ, ಮಂಗಳವಾರ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು ನಡೆದಿದೆ. ಮೊದಲ ದಿನದ ಕೃತ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾದರೆ, ಎರಡನೇ ದಿನ ಕ್ಯಾಮರಾ ಮತ್ತು ಡಿವಿಆರ್ ಅನ್ನೂ ಕಳ್ಳರು ಹೊತ್ತೊಯ್ದಿರುವುದು ಆಘಾತಕಾರಿ. ಸದ್ಯ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಪರಿಶೀಲನೆ ನಡೆಸಿದ್ದು, ಕಳ್ಳರ ಜಾಡು ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
ಫರಂಗಿಪೇಟೆ ಸಮೀಪ ಸುಜೀರ್ ಎಂಬಲ್ಲಿ,ನೂರಾರು ವರ್ಷಗಳ ಇತಿಹಾಸವಿದ್ದ ದೇವರಿಗೆ ಸಂಬಂಧಿಸಿದ ಲಕ್ಷಾಂತರ ರೂ ಮೌಲ್ಯ ಬೆಲೆಬಾಳುವ ಚಿನ್ನಹಾಗೂ ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋಗಿದ್ದು, ದೃಶ್ಯಾವಳಿಗಳು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಸಮೀಪದ ಸುಜೀರು ಎಂಬಲ್ಲಿರುವ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ 2.30 ಲಕ್ಷದ ಮೌಲ್ಯದ ನಗನಗದುಗಳನ್ನು ಕಳ್ಳರು ಎಗರಿಸಿದ್ದಾರೆ.
ಮಂಗಳವಾರ ನಸುಕಿಗೂ ಮುನ್ನ ಸೋಮವಾರ ತಡರಾತ್ರಿಗೆ ತುಂಬೆಯ ದೇವಸ್ಥಾನವೊಂದಕ್ಕೆ ಕಳ್ಳರು ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ. ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.