ಬಂಟ್ವಾಳ: ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯವೆಸಗುತ್ತಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ಡಿ.4ರಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ಬಂಟ್ವಾಳದಿಂದ 1500ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ಹೇಳಿದ್ದಾರೆ.
ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಈಗಾಗಲೇ ಸಭೆಗಳನ್ನು ನಡೆಸಲಾಗಿದೆ. ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಲ್ ನಿಂದ ಮೆರವಣಿಗೆ ಮಂಗಳೂರಿನ ಮಿನಿ ವಿಧಾನಸೌಧದಲ್ಲಿ ಸಮಾವೇಶಗೊಳ್ಳಲಿದೆ ಅಲ್ಲಿ ಪರಿವಾರ ಸಂಘಟನೆಯ ಪ್ರಮುಖರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಬಂಟ್ವಾಳದ ಎಲ್ಲ ಮಹಾಶಕ್ತಿ ಕೇಂದ್ರಗಳು, ಶಕ್ತಿಕೇಂದ್ರಗಳ ಪ್ರಮುಖರು, ಬೂತ್ ಸಮಿತಿ ಸಹಿತ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸಭೆ ನಡೆಸಿ ಶಾಸಕರ ನೇತೃತ್ವದಲ್ಲಿ ಭಾಗವಹಿಸಲಿದ್ದೇವೆ ಎಂದರು. ಈ ಸಂದರ್ಭ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ, ಶಿವಪ್ರಸಾದ್ ಶೆಟ್ಟಿ, ಮಾಧ್ಯಮ ಪ್ರಮುಖ್ ಪುರುಷೋತ್ತಮ ಶೆಟ್ಟಿ ವಾಮದಪದವು ಉಪಸ್ಥಿತರಿದ್ದರು.