ಟೆಂಪೊ ದಿಂದ ಮರಳು ಅನ್ಲೋಡ್ ಮಾಡುತ್ತಿದ್ದ ವೇಳೆ ಇಬ್ಬರ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದಿದೆ. ರಹೀಂ ಮೃತಪಟ್ಟವರು. ಮತ್ತೋರ್ವ ಯುವಕ ಖಲಂದರ್ ಶಾಫಿ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಬೆನ್ನಲ್ಲೇ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ. ರಹೀಂ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಉಲ್ಲೇಖಿತ ಪತ್ರದ ಅನುಸಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಡಿ 27ರ ಸಂಜೆ 6 ಗಂಟೆಯಿಂದ 30ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.