ಪ್ರಮುಖ ಸುದ್ದಿಗಳು

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಹೇಳಿದರು.

ಅವರು ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ  ನೀಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಜಾಹೀರಾತು

ನಿವೇಶನಗಳ ನೋಂದಣಿ, ನಕ್ಷೆ ಮಂಜೂರಾತಿ,  ಖಾತೆ, 9/11, ಏಕ ನಿವೇಶನ ಸೇರಿದಂತೆ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಹಲವಾರು ನಿಯಮಗಳನ್ನು ಪಾಲಿಸಬೇಕಿರುವುದರಿಂದ ಸಾರ್ವಜನಿಕರಿಗೆ ಮನೆ ನಿರ್ಮಿಸಲು ವಿಳಂಬವಾಗುತ್ತಿರುವ ಬಗ್ಗೆ ಜನಪ್ರತಿನಿಧಿಗಳು ಹಾಗೂ  ಸಾರ್ವಜನಿಕರಿಂದ ಹಲವಾರು ಅಹವಾಲುಗಳು ಬಂದಿದೆ. ಯಾವುದೇ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲು   ನಗರ ಯೋಜನಾ ಪ್ರಾಧಿಕಾರ ಅಗತ್ಯವಾಗಿದೆ. ಆದರೂ ಇದರಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಸರಕಾರದ ಕಾಳಜಿಯಾಗಿದೆ. ಈ ನಿಟ್ಟಿನಲ್ಲಿ ನಿಯಮಗಳನ್ನು ಸರಳೀಕರಿಸಿ ತ್ವರಿತವಾಗಿ  ಇಂತಹ ಮಂಜೂರಾತಿ ನೀಡುವ ಬಗ್ಗೆ  ಸರಕಾರ ಗಮನ ಹರಿಸಲಿದೆ ಎಂದು ಅವರು ತಿಳಿಸಿದರು.

ನಿವೇಶನ ಮಂಜೂರಾತಿ ಸಂದರ್ಭದಲ್ಲಿ ಕಂದಾಯ ಮತ್ತು ಅರಣ್ಯ ಭೂಮಿಯ ಬಗ್ಗೆ ತಕರಾರು ಉದ್ಭವಿಸಿ ಪ್ರಕ್ರಿಯೆಗಳು ವಿಳಂಬವಾಗುತ್ತಿವೆ.  ಈ ನಿಟ್ಟಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಗಳು ಜಂಟಿಯಾಗಿ  ಸರ್ವೆ ಕಾರ್ಯವನ್ನು ತ್ವರಿತವಾಗಿ ನಡೆಸಬೇಕೆಂದು ಅವರು ಸೂಚಿಸಿದರು.

94 ಸಿ ಪ್ರಕರಣದಲ್ಲಿ ಭೂ ಮಂಜೂರಾತಿ ಕಡತಗಳನ್ನು ಯಾವುದೇ ಸಕಾರಣಗಳಿಲ್ಲದೆ ವಿಳಂಬಿಸುವುದನ್ನು ಸರಕಾರ ಸಹಿಸುವುದಿಲ್ಲ. ಕಾಲಮಿತಿಯಲ್ಲಿ ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕೆಂದು ಸಚಿವರು ಸೂಚಿಸಿದರು.

ಸುಳ್ಯ ಶಾಸಕಿ ಭಾಗೀರಥಿ  ಮುರುಳ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ನಗರ ಪಂಚಾಯತ್  ಅಧ್ಯಕ್ಷೆ ಶಶಿಕಲಾ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ  ಮತ್ತಿತರರು ಉಪಸ್ಥಿತರಿದ್ದರು. ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ ಸ್ವಾಗತಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ  ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್   ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿ, ಸುಳ್ಯ ತಾಲೂಕು ಆಸ್ಪತ್ರೆಯ  ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು  ನೂತನ ಶವಗಾರ, ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ,  ಸುಳ್ಯ ನಗರ ಯೋಜನಾ ಪ್ರಾಧಿಕಾರ ಕಚೇರಿ   ಮತ್ತಿತರ ಕಾಮಗಾರಿಗಳನ್ನು ಉದ್ಘಾಟಿಸಿದರು.

ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಮಂಜೂರಾತಿ ಪತ್ರವನ್ನು  ಫಲಾನುಭವಿಗಳಿಗೆ ವಿತರಿಸಿದರು. ಕಾಡಾನೆ ದಾಳಿಯಿಂದ ಸಂತ್ರಸ್ತ ರೈತರಿಗೆ  ಪರಿಹಾರ ಮೊತ್ತ ಚೆಕ್ ವಿತರಿಸಲಾಯಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.