ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವು ಬಂಟ್ವಾಳ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಮೂಲಕ ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳಬಹುದಾದ ಆಸ್ತಿ ವಿವಾದಗಳು, ವಿಭಾಗ ಮೊಕದ್ದಮೆಗಳು, ಹಣ ವಸೂಲಿ ಪ್ರಕರಣಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿಯಲ್ಲಿ ದಾಖಲಾದ ಮೊಕದ್ದಮೆಗಳು, ಮೋಟಾರು ವಾಹನ ಪ್ರಕರಣಗಳು, ಎಂಎಂಆರ್ ಡಿ ಪ್ರಕರಣಗಳು, ವಿವಾಹ ಸಮನ್ವಯ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಮತ್ತು ಇತರ ರಾಜಯೋಗ್ಯ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಸಿವಿಲ್ ಮತ್ತು ಕ್ರಿಮಿನಲ್ ವಿವಾದಗಳನ್ನು ಪರಿಹರಿಸಿಕೊಳ್ಳಲು ಪ್ರಯತ್ನ ಮಾಡುವುದಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಜೊತೆಗೆ ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಮತ್ತು ನೀರಿನ ಶುಲ್ಕಗಳಿಗೆ ಸಂಬಂಧಿಸಿದ ವಿವಾದಗಳು, ಕಾರ್ಮಿಕ ವಿವಾದಗಳು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದಾಗಿದೆ. ವಕೀಲರ ಮೂಲಕ ಅಥವಾ ತಾವೇ ಖುದ್ದಾಗಿ ಸಮಿತಿಗೆ ಭೇಟಿ ನೀಡಿ, ಪ್ರಕರಣವನ್ನು ರಾಜಿ ಮಾಡಿಕೊಳ್ಳಬಹುದು ಎಂದು ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಅನಿಲ್ ಪ್ರಕಾಶ್ ಎಂ.ಪಿ. ಹಾಗೂ ಸದಸ್ಯ ಕಾರ್ಯದರ್ಶಿ ಕೃಷ್ಣಮೂರ್ತಿ ಎನ್. ಅವರು ತಿಳಿಸಿದ್ದಾರೆ.