ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬಂಟ್ವಾಳ ತಾಲೂಕು ಪಂಚಾಯಿತಿಯ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಸಾಮಾನ್ಯ ವ್ಯಕ್ತಿಯೊಬ್ಬರು ಸಾಧನೆ ಮೂಲಕ ಎತ್ತರಕ್ಕೇರಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ಜೀವನ ನಿದರ್ಶನ ಎಂದರು.ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ವಾಲ್ಮೀಕಿ ಆದರ್ಶವನ್ನು ಪಾಲಿಸುವಂತೆ ಕರೆ ನೀಡಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ .ವಿ.ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ್ ಕೆದಿಲ, ಮುಖಂಡರಾದ ಪಿ.ಬಿ.ಮಹಾಲಿಂಗ ನಾಯ್ಕ್ ಪುಣಚ, ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿನಯಕುಮಾರಿ ಕೆ.ಬಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೇಷಗಿರಿ ನಾಯ್ಕ್ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಪ್ರಧಾನ ಭಾಷಣಕಾರರಾಗಿ ಆಗಮಿಸಿದ ದೇವಸ್ಯಮುಡೂರು ಶಾಲೆಯ ಶಿಕ್ಷಕಿ ಹರಿಣಾಕ್ಷಿ ಮಾತನಾಡಿ, ತನ್ನ ಸಾಧನೆಯಿಂದ ವ್ಯಕ್ತಿ ಶ್ರೇಷ್ಠನಾಗುವುದಕ್ಕೆ ನಿದರ್ಶನವಾಗಿ ಮಹರ್ಷಿ ವಾಲ್ಮೀಕಿಯನ್ನು ಕಾಣಬಹುದು ಎಂದು ಹೇಳಿದರು. ಈ ಸಂದರ್ಭ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ನಿಲಯಪಾಲಕ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು. ನಿಲಯಪಾಲಕಿ ಭವ್ಯಾ ವಂದಿಸಿದರು.