ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪಪೂ ಕಾಲೇಜು ಮತ್ತು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿ, ಮಾತನಾಡಿ, ಉತ್ತಮ ಸಂಸ್ಕಾರ, ಸಂಸ್ಕೃತಿ, ಪಠ್ಯ, ಪಠ್ಯೇತರ ಚಟುವಟಿಕೆಗಳ ಮೂಲಕ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ನೀಡುವ ಉತ್ತಮ ಶಿಕ್ಷಣದಿಂದ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಸಾಧ್ಯವಾಗಿದೆ. ಇದು ಅತ್ಯಂತ ಶ್ರೇಷ್ಠ ಕಾರ್ಯ ಎಂದು ಹೇಳಿದರು.
ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ, ಸಂಸ್ಥೆ ಅಭಿವೃದ್ಧಿಗೆ ಅನುದಾನ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.
ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶಕೀಲಾ ಕಾವ, ಶ್ರೀ ಭಾರತೀ ಸಮೂಹ ಸಂಸ್ಥೆಯ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ, ಕಾರ್ಯಾಲಯ ಕಾರ್ಯದರ್ಶಿ ಎಂ.ಟಿ.ಭಟ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜಗೋಪಾಲ್ ಜಿ. ಅವರು ಉಪಸ್ಥಿತರಿದ್ದರು.
ಇದೇ ಸಂದರ್ಭ ಸಂಸ್ಥೆ ಅಭಿವೃದ್ಧಿಗೆ ಕೊಡುಗೆ ನೀಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮಾಜಿ ಕಾರ್ಪೋರೇಟರ್ ಶಕೀಲಾ ಕಾವ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ನೀಡಲಾಯಿತು.
ಮೆದು ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಪ್ರಾಂಶುಪಾಲ ಸಂದೀಪ್ ಆಚಾರ್ಯ ವರದಿ ಮಂಡಿಸಿದರು. ಉಪನ್ಯಾಸಕ ಕಾರ್ತಿಕ್ ಕೃಷ್ಣ ಮತ್ತು ಶಿಕ್ಷಕಿ ಸೌಮ್ಯಾ ಕಾರ್ಯಕ್ರಮ ನಿರೂಪಿಸಿದರು. ಕೋಆರ್ಡಿನೇಟರ್ ಜಯಂತಿ ವಂದಿಸಿದರು.
ಬಹುಮಾನ ವಿತರಣೆ ಸಮಾರಂಭ :
ಬೆಳಗ್ಗೆ ಬಹುಮಾನ ವಿತರಣೆ ಸಮಾರಂಭ ನಡೆಯಿತು. ಶ್ರೀ ಭಾರತೀ ಸಮೂಹ ಸಂಸ್ಥೆಯ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿದ್ದರು. ಇಂಡಸ್ಟ್ರಿಯಲ್ ಕಾರ್ಪೊರೇಷನ್ ನಿವೃತ್ತ ಅಧಿಕಾರಿ ನರಸಿಂಹ ಹೆಗಡೆ ಕೆರೆಮನೆ ಉದ್ಘಾಟಿಸಿದರು. ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ರಮೇಶ್ ಭಟ್ ಸರವು, ಮಂಗಳೂರು ಹವ್ಯಕ ಸಭಾ ಅಧ್ಯಕ್ಷೆ ಗೀತಾದೇವಿ ಸಿ., ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಭಟ್ ಉಪಸ್ಥಿತರಿದ್ದರು.ಪ್ರಾಂಶುಪಾಲ ಸಂದೀಪ್ ಆಚಾರ್ಯ ಪ್ರಸ್ತಾಪಿಸಿದರು. ಉಪನ್ಯಾಸಕಿ ರಾಜಶ್ರೀ ಪಿ.ಇ. ಸ್ವಾಗತಿಸಿದರು. ಉಪನ್ಯಾಸಕಿ ಮೇಘನಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಗಾಯತ್ರಿ ಎನ್.ಎಸ್. ವಂದಿಸಿದರು