ಪ್ರಮುಖ ಸುದ್ದಿಗಳು

ಮಳೆಗಾಲದಲ್ಲಿ ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ: ಸಚಿವ ಖಾದರ್ ಎಚ್ಚರಿಕೆ

ಮಂಗಳೂರು: ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.


ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆಯಲ್ಲಿ ನೀರು ನಿಲ್ಲುವ ಪ್ರಕರಣಗಳನ್ನು ಸಮನ್ವಯದಿಂದ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮ ಕೈಗೊಳ್ಳಬೇಕು ಎಂದರು.
ಮಳೆಗಾಲದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತ ಕಾರಣ ಅಪಘಾತಗಳಾಗಿ ಸಾರ್ವಜನಿಕರ ಪ್ರಾಣ ಹಾನಿ ಸಂಭವಿಸಿದರೆ ಸಂಬಂಧಿಸಿದ ಇಲಾಖಾ ಇಂಜಿನಿಯರ್ ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ ಸಚಿವರು, ಪದೇ ಪದೇ ಹೊಂಡ ಮುಚ್ಚುವ ಕೆಲಸದ ಬದಲು ಶಾಶ್ವತ ಕಾಮಗಾರಿಗೆ ಒತ್ತು ನೀಡಲು ತಿಳಿಸಿದರು.


ಮೆಸ್ಕಾಂ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಂಪರ್ಕ ನಿರ್ವಹಣೆಗೆ ಹೆಚ್ಚುವರಿ ಲೈನ್ ಮ್ಯಾನ್ ಮತ್ತು ವಾಹನಗಳನ್ನು ಒದಗಿಸಬೇಕು. ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ಮಾನವ ನಿರ್ಮಿತ ಸಮಸ್ಯೆಗಳನ್ನು ತಗ್ಗಿಸಲು ಗಮನಹರಿಸಬೇಕು. ನೆರೆಯಿಂದ ರಸ್ತೆ ತಡೆಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ವಿಳಂಬಿಸದೆ ತೆರವುಗೊಳಿಸಬೇಕು. ಪರಿಹಾರ ಕ್ರಮಗಳನ್ನು ಕೈಗೊಳ್ಳುವಾಗ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಯು ಟಿ ಖಾದರ್ ಸೂಚಿಸಿದರು.

ಜಾಹೀರಾತು


ಟಾಸ್ಕ್ ಫೋರ್ಸ್ ಗಳನ್ನು ಸಕ್ರಿಯಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯತ್ ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ಅವರು ತಿಳಿಸಿದರು.


ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರು ಮಳೆಗಾಲ ನಿರ್ವಹಣೆಗೆ ಕೈಗೊಳ್ಳಗಿರುವ ಸಿದ್ಧತೆಗಳನ್ನು ಸಭೆಗೆ ವಿವರಿಸಿದರು.
ಸಭೆಯಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಅರುಣ್, ಡಿಸಿಎಫ್ ರವಿಶಂಕರ್, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಇದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.