ಬಂಟ್ವಾಳ: ಪುತ್ತೂರಿನಿಂದ ಬರಿಮಾರು ತನಕ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಾಳೆಯಿಂದ ಬುರ್ದುವರೆಗೆ ಸಂಚರಿಸಲಿದೆ ಎಂದು ಕೆಎಸ್‌ಆರ್‌ಟಿಸಿ ಬಿ.ಸಿ.ರೋಡ್ ಘಟಕದ ವ್ಯವಸ್ಥಾಪಕ ಇಸ್ಮಾಯಿಲ್ ತಿಳಿಸಿದರು.
ಶುಕ್ರವಾರ ಬಂಟ್ವಾಳ ತಾಲೂಕು ಮಟ್ಟದ ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಪುತ್ತೂರಿನಿಂದ ಬರಿಮಾರು ತನಕ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬುರ್ದುವರೆಗೆ ಸಂಚರಿಸಲಿದ್ದು, ಇದರಿಂದ ಸಾರ್ವನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮಾತನಾಡಿ, ಎಪ್ರಿಲ್ ತಿಂಗಳಲ್ಲಿ ನಡೆದ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬುರ್ದುವರೆಗೆ ಸಂಚರಿಸುವ ಬಗ್ಗೆ ನಿರ್ಣಯಿಸಿ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿತ್ತು. ಸಮಿತಿಯ ಎಲ್ಲಾ ಸದಸ್ಯರ ಸಹಕಾರದಿಂದ ಸಾರ್ವಜನಿಕರಿಗೆ ಬಸ್ ಸೌಲಭ್ಯ ಕಲ್ಪಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಗೃಹಲಕ್ಷ್ಮೀ ಫಲಾನುಭವಿಗಳ ಸೇರ್ಪಡೆ ಕಾರ್ಯಕ್ರಮ
ಗೃಹಲಕ್ಷ್ಮೀ ಯೋಜನೆಯಿಂದ ಹೊರಗುಳಿದವರಿಗೆ ಯೋಜನೆಯ ಸೌಲಭ್ಯ ಸಿಗುವಂತೆ ಮಾಡುವ ಸಲುವಾಗಿ ಗ್ರಾಮ ಮಟ್ಟದಲ್ಲಿ ಅರ್ಹ ಗೃಹಲಕ್ಷ್ಮೀ ಫಲಾನುಭವಿಗಳ ಸೇರ್ಪಡೆ, ಅರ್ಜಿ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ತಿಳಿಸಿದ್ದಾರೆ. ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯಿಂದ ಹೊರಗುಳಿದವರಿಗೆ ಸೌಲಭ್ಯ ಸಿಗುವಂತೆ ಮಾಡಿ ಶೇ.100ರಷ್ಟು ಗುರಿ ಸಾಧಿಸುವ ಉದ್ದೇಶ ಹೊಂದಿದ್ದು, ಈ ನಿಟ್ಟಿನಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಅರ್ಹ ಗೃಹಲಕ್ಷ್ಮೀ ಫಲಾನುಭವಿಗಳ ಸೇರ್ಪಡೆ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ಹಮ್ಮಿಕೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಾರ್ಯದರ್ಶಿಗಳಾದ ಸಚಿನ್ ಕುಮಾರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ್, ಸಮಿತಿ ಸದಸ್ಯರು ಹಾಗೂ ಪಂಚ ಗ್ಯಾರೆಂಟಿ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.