ಬಂಟ್ವಾಳ

ನವೀಕೃತ ಬಂಟ್ವಾಳ ರೈಲ್ವೆ ನಿಲ್ದಾಣ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಪ್ರಧಾನಿ ಮೋದಿ: ಕೊಂಕಣ ರೈಲ್ವೆ ಭಾರತ ರೈಲ್ವೆ ಜೊತೆ ವಿನಿಯೋಗವಾಗಲಿ ಸಂಸದ ಕ್ಯಾ. ಚೌಟ

ಶುಕ್ರವಾರ ಮಧ್ಯಾಹ್ನ ಬಂಟ್ವಾಳ ರೈಲ್ವೆ ನಿಲ್ದಾಣವೂ ಸೇರಿ ಅಮೃತ ಭಾರತ ನಿಲ್ದಾಣ ಯೋಜನೆಯಡಿ ಮರುಅಭಿವೃದ್ಧಿಗೊಂಡ ರಾಷ್ಟ್ರದ 75 ರೈಲ್ವೆ ನಿಲ್ದಾಣಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್ ನ ಜಲಂಧರ್ ಕ್ಯಾಂಟ್ ರೈಲ್ವೆ ನಿಲ್ದಾಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಬಂಟ್ವಾಳ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ಹಾಕಲಾದ ಬೃಹತ್ ಎಲ್.ಇ.ಡಿ. ಪರದೆಯಲ್ಲಿ ಈ ದೃಶ್ಯವನ್ನು ನೇರಪ್ರಸಾರದ ಮೂಲಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಹಿತ ಪ್ರಮುಖರು ವೀಕ್ಷಿಸಿದರು. ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಒಳಪಡುವ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ 26.18 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ನಡೆದಿದ್ದು, ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

VNR GOLD

ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಅಭಿವೃದ್ಧಿಯ ದೃಷ್ಟಿಯಿಂದ ಕೊಂಕಣ ರೈಲ್ವೆ ವಿಭಾಗವನ್ನು ಭಾರತ ರೈಲ್ವೆಯೊಂದಿಗೆ ವಿಲೀನ ಮಾಡುವ ಅಗತ್ಯವನ್ನು ಒತ್ತಿ ಹೇಳಿ, ಇಲಾಖೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಕರಾವಳಿಯ ಎಲ್ಲ ಜನಪ್ರತಿನಿಧಿಗಳ ಸಹಕಾರ ಬೇಕು ಎಂದರು.

ಜಾಹೀರಾತು

ಪುತ್ತೂರು ರೈಲ್ವೆ ನಿಲ್ದಾಣವನ್ನೂ ಅಮೃತ ಭಾರತ ಯೋಜನೆಯಡಿ ಸೇರ್ಪಡೆ ಮಾಡಬೇಕು ಎಂದು ಹೇಳಿದ ಕ್ಯಾ. ಚೌಟ, ಈ ಕುರಿತು ಗಮನಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಮಂಗಳೂರಿಗೆ ವಂದೇ ಭಾರತ ರೈಲು ಸಾಗುವ ವ್ಯವಸ್ಥೆ ದೊರಕಲು ಅಗತ್ಯವಾದ ವಿದ್ಯುದೀಕರಣವನ್ನು ಶೀಘ್ರದಲ್ಲಿ ನೆರವೇರಿಸಿದ ನೈಋತ್ಯ ರೈಲ್ವೆಯ ಕಾರ್ಯಕ್ಷಮತೆಯನ್ನು ಕ್ಯಾ. ಚೌಟ ಶ್ಲಾಘಿಸಿದರು.

ಕೇವಲ 25 ರೂಪಾಯಿಗಳಿಗೆ ಮಂಗಳೂರಿಂದ ಸುಬ್ರಹ್ಮಣ್ಯರೋಡ್ ನಿಲ್ದಾಣಕ್ಕೆ ಹೋಗಲು ಸಾಧ್ಯವಾಗುತ್ತಿದ್ದು, ಸಾರ್ವಜನಿಕರು ಇದರ ಅನುಕೂಲ  ಬಳಸಿಕೊಳ್ಳಬೇಕು ಎಂದು ಹೇಳಿದ ಕ್ಯಾ. ಚೌಟ, ಮೂಲಸೌಕರ್ಯ ಅಭಿವೃದ್ಧಿಯೂ ಜತೆಜತೆಯಾಗಿ ಸಾಗುತ್ತಿದೆ ಎಂದರು. ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಡಿವಿಜನಲ್ ರೈಲ್ವೆ ಮ್ಯಾನೇಜರ್ ಮುದಿತ್ ಮಿತ್ತಲ್, ಗತಿಶಕ್ತಿಯ ಹಿರಿಯ ಅಭಿಯಂತರ ಆನಂದ್ ಭಾರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೈಲ್ವೆ ಸಿಬ್ಬಂದಿ ನಿವೇದಿತಾ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮವನ್ನು ಮೊದಲನೇ ಪ್ಲಾಟ್ ಫಾರ್ಮ್ ನಲ್ಲೇ ಮಾಡಲಾಯಿತು. ಇದಕ್ಕಾಗಿ ಬೃಹತ್ ಎಲ್.ಇ.ಡಿ. ಪರದೆಯನ್ನು ಸಿದ್ಧಪಡಿಸಲಾಗಿತ್ತು. ಅಲ್ಲಿಂದಲೇ ಸಂಸದರ ಸಹಿತ ಗಣ್ಯರು ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರೊಂದಿಗೆ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ಎ.ರುಕ್ಮಯ ಪೂಜಾರಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ್, ರೈಲ್ವೆ ಹೋರಾಟಗಾರರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಸಂದೇಶ್ ಶೆಟ್ಟಿ,ಸಹಿತ ಬಿಜೆಪಿ ಮುಖಂಡರು, ಬಂಟ್ವಾಳ ಸುತ್ತಲಿನ ನಾಗರಿಕರು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ಭಾಷಣ ಹಾಗೂ ಸಭಾ ಕಾರ್ಯಕ್ರಮ ಆರಂಭಕ್ಕೂ ಮುನ್ನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬಂಟ್ವಾಳ ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಲವು ಪ್ರದರ್ಶನಗಳನ್ನು ನೀಡಿದರು. ಬಂಟ್ವಾಳ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ, ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ, ಹಂಸಿನಿ ಕುಮಾರ್ ಅವರಿಂದ ತುಳು ಮತ್ತು ಕನ್ನಡ ಹಾಡು, ಬಿ.ಸಿ.ರೋಡ್ ಅಜ್ಜಿಬೆಟ್ಟುವಿನ ಬಿ.ಮೂಡ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಚೆಂಡೆ, ತಾಳ, ಯಕ್ಷಗಾನ ನೃತ್ಯ ಪ್ರದರ್ಶನಗೊಂಡಿತು.ರೈಲ್ವೆ ಉದ್ಯೋಗಿಗಳಿಂದಲೂ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ರೈಲ್ವೆ ಕುರಿತು ಪ್ರಬಂಧ ಬರೆದು ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.