ಬಂಟ್ವಾಳ: ರಾಜ್ಯ ಸರ್ಕಾರದ ನಿರ್ದೇಶನದಂತೆ ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ಕಚೇರಿಯಲ್ಲಿ ಗುರುವಾರ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆಯ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ರೈತರ ಸಲಹಾ ಸಮಿತಿಯನ್ನು ರಚಿಸಲಾಯಿತು.
ಸಭೆಯಲ್ಲಿ ರೈತರ ಪ್ರತಿನಿಧಿಗಳ ಸಮ್ಮುಖ ಸಮಿತಿ ರಚನೆ ಪ್ರಕ್ರಿಯೆ ನಡೆಸಲಾಗಿದ್ದು, ಅಬೂಬಕ್ಕರ್ ಅಮ್ಮುಂಜೆ ಅವರನ್ನು ಸರ್ವಾನುಮತದಿಂದ ಬಂಟ್ವಾಳ ತಾಲೂಕು ರೈತರ ಸಲಹಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಅಧಿಕಾರಿಗಳು, ರೈತರ ಸಲಹಾ ಸಮಿತಿಯು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳು, ಸರ್ಕಾರದ ವಿವಿಧ ಕೃಷಿ, ತೋಟಗಾರಿಕೆ ಹಾಗೂ ಪಶು ಸಂಗೋಪನಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಹೊಸ ತಂತ್ರಜ್ಞಾನಗಳ ಅಳವಡಿಕೆ ಹಾಗೂ ಇಲಾಖೆಗಳೊಂದಿಗೆ ರೈತರ ಸಮನ್ವಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಕೃಷಿ ಸಹಾಯಕ ನಿರ್ದೇಶಕಿ ವೀಣಾ ರೈ, ತಾಲೂಕು ಕೃಷಿ ತಾಂತ್ರಿಕ ಅಧಿಕಾರಿ ನಂದನ್ ಶೆಣೈ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿ.ಸೋಜಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರೈತರ ಪ್ರತಿನಿಧಿಗಳು ಹಾಗೂ ಕೃಷಿಕರು ಉಪಸ್ಥಿತರಿದ್ದರು.
ಹೊಸದಾಗಿ ರಚನೆಯಾದ ರೈತರ ಸಲಹಾ ಸಮಿತಿಯು ತಾಲೂಕಿನ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡುವ ವಿಶ್ವಾಸವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.