





ಬಾಕಿ ಇರುವ ರಾಜಿಯಾಗಬಹುದಾದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಸೆ.12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ವಿಚಾರಣೆಯ ಹಂತದಲ್ಲಿರುವ ರಾಜಿಯಾಗಬಹುದಾದ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಂಟ್ವಾಳ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ. ಬಂಟ್ವಾಳ ಅವರು ತಿಳಿಸಿದರು.

ಕ್ರಿಮಿನಲ್ ಕಾಂಪೌಂಡಬಲ್ ಪ್ರಕರಣಗಳು, ಎನ್‌ಐ ಕಾಯ್ದೆ ಪ್ರಕರಣಗಳು, ಬ್ಯಾಂಕ್ ಹಾಗೂ ಹಣ ವಸೂಲಿ ಪ್ರಕರಣಗಳು, ಎಂಎಸಿಟಿ, ಕಾರ್ಮಿಕ ವ್ಯಾಜ್ಯಗಳು, ಕೌಟುಂಬಿಕ ವಿವಾದಗಳು, ಭೂಸ್ವಾಧೀನ, ಕಂದಾಯ ಸೇರಿದಂತೆ ವಿವಿಧ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದರು.
ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ರಾಜೇಂದ್ರ ಪ್ರಸಾದ್ ಕೆ.ಎಸ್., ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಸೌಂದರ್ಯ ಎಂ. ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಬಂಟ್ವಾಳ ವ್ಯಾಪ್ತಿಯ ಎಲ್ಲ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಉಪನಿರೀಕ್ಷಕರು, ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಸಂಸ್ಥೆಗಳ ಶಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದರು


Be the first to comment on "ರಾಷ್ಟ್ರೀಯ ಲೋಕ ಅದಾಲತ್: ಪೂರ್ವಭಾವಿ ಸಭೆ"