ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಭಕ್ತಿಭಾವದ ನಾಗರ ಪಂಚಮಿ ಆಚರಣೆ
ಮಂಗಳೂರು: ನಗರದ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವ ಹಾಗೂ ಧಾರ್ಮಿಕ ಸಂಭ್ರಮದಿಂದ ಆಚರಿಸಲಾಯಿತು.
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ನಾಗದೇವರ ಸನ್ನಿಧಿಯಲ್ಲಿ ನಾಗದೇವರಿಗೆ ವಿಶೇಷ ನಾಗಪೂಜೆ, ನಾಗತಂಬಿಲ ಹಾಗೂ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಭಟ್ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು. ನಾಗರ ಪಂಚಮಿಯ ಪ್ರಯುಕ್ತ ಬೆಳಗ್ಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ನಾಗದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಬಾರಿ ಸಂಕ್ರಮಣ ಹಾಗೂ ನಾಗರ ಪಂಚಮಿ ಒಂದೇ ಸಂದರ್ಭದಲ್ಲಿ ಬಂದ ಹಿನ್ನೆಲೆಯಲ್ಲಿ ಕದ್ರಿ ಕ್ಷೇತ್ರಕ್ಕೆ ಸಹಸ್ರಾರು ಭಕ್ತರು ಆಗಮಿಸಿದ್ದರು. ಭಕ್ತರ ಅನುಕೂಲಕ್ಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.
ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದಲ್ಲಿ ನಡೆದ ಅನ್ನಸಂತರ್ಪಣೆಯಲ್ಲಿ ಸುಮಾರು 5,000 ಮಂದಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.
ಸಹಸ್ರಾರು ಭಕ್ತರ ಭಕ್ತಿಭಾವದ ಉಪಸ್ಥಿತಿ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ದಿನವಿಡೀ ವಿಶೇಷ ಧಾರ್ಮಿಕ ವಾತಾವರಣ ನಿರ್ಮಾಣವಾಗಿತ್ತು. ಭಕ್ತರ ದಟ್ಟಣೆಯೂ ಕಂಡುಬಂದಿತು