ಕಾರ್ಕಳ (ಸಾಣೂರು): ಕಾರ್ಕಳ ಸಮೀಪದ ಸಾಣೂರು ಜಂಕ್ಷನ್ ವ್ಯಾಪ್ತಿಯಲ್ಲಿ ಭಾನುವಾರ ಮಾಜಿ ಸಚಿವ ಬಿ.ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ರೈ ಅವರು ಅಪಾಯದಿಂದ ಪಾರಾಗಿದ್ದು, ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂಡುಬಿದಿರೆ ಹಾಗೂ ಕಾರ್ಕಳವನ್ನು ಸಂಪರ್ಕಿಸುವ ಮುಖ್ಯ ರಸ್ತೆಯ ಸಾಣೂರು ಪ್ರದೇಶದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ತೀವ್ರವಾಗಿ ಜಜ್ಜುಗುಂದಿದ್ದು, ಬಸ್‌ಗೂ ಹಾನಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ. ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿಷಯ ತಿಳಿದ ತಕ್ಷಣ ಕಾರ್ಕಳ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಅಪಘಾತಕ್ಕೊಳಗಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.