ಮಾಣಿ: ಸಂಘ ಸಂಸ್ಥೆಗಳು ಸಮಾಜಮುಖಿ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಮಾಣಿ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಅವರು ಮಾಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾವೂರು ಬಂಟ್ವಾಳದ ‘ಮಾತೃಭೂಮಿ ಸೇವಾ ಸಂಘ’ದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ “ಮದ್ಯ-ಮಾದಕ ವಸ್ತು ಹಾಗೂ ಮೊಬೈಲ್ ಅವಲಂಬನೆ ಕುರಿತ ಜಾಗೃತಿ ಕಾರ್ಯಕ್ರಮ”ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಮಾಜಸೇವೆ ಹಾಗೂ ಸಮಾಜಮುಖಿ ಚಿಂತಕರಾದ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಾವತಿ ಅವರಿಗೆ ಆತ್ಮೀಯ ಸನ್ಮಾನ ನೆರವೇರಿಸಲಾಯಿತು.
ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ECRC ಪ್ರಬಂಧಕ ಹಾಗೂ ಸಂಘದ ನಿರ್ದೇಶಕ ಸುರೇಶ್ ಎಸ್. ನಾವೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾದಕ ದ್ರವ್ಯಗಳ ದುಷ್ಪರಿಣಾಮ ಹಾಗೂ ಮೊಬೈಲ್ ಅತಿಯಾದ ಬಳಕೆಯಿಂದಾಗುವ ತೊಂದರೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಿದರು. ವಿಟ್ಲ ಪೊಲೀಸ್ ಠಾಣೆಯ ಆರಕ್ಷಕ ಸಿದ್ದು ಅವರು ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿಆರ್‌ಪಿ ಸುರೇಖಾ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಮಾತೃಭೂಮಿ ಸೇವಾ ಸಂಘಟಕರಾದ ನವೀನ್ ನಂತೂರು ಮತ್ತು ತಾರಾನಾಥ ಮಲೆಬಾವು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಿಕ್ಷಕಿ ಅಮೃತಾ ಎಸ್. ಜೋಶಿ ಸ್ವಾಗತಿಸಿದರು. ಸಹಶಿಕ್ಷಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು