
ಮಂಗಳೂರು: ನಗರದ ಬರ್ಕೆ ಮತ್ತು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕನ್ನ ಕಳವು ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಮಂಗಳೂರು ನಗರ ಪೊಲೀಸರು, ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಗುಜರಾತ್‌ನ ವಡೋದರಾದಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 18 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ ಇ ನ್ನಿತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಈಶಾನ್ಯ ದೆಹಲಿಯ ಗೋಕುಲ್ ಪುರಿ ನಿವಾಸಿ ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34) ಹಾಗೂ ನವದೆಹಲಿಯ ಸುಲ್ತಾನ್ ಪುರಿ ನಿವಾಸಿ ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಎಂದು ಗುರುತಿಸಲಾಗಿದೆ.
ಪ್ರಕರಣದ ಹಿನ್ನೆಲೆ:
ಮಂಗಳೂರು ನಗರದ ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನಲ್ಲಿರುವ ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ್ದ ಕಳ್ಳರು, ಸೆಪ್ಟೆಂಬರ್ 28ರಂದು ಮಧ್ಯಾಹ್ನದಿಂದ ಸಂಜೆಯೊಳಗೆ ಸುಮಾರು 14 ಲಕ್ಷ ರೂ ಮೌಲ್ಯದ ಚಿನ್ನಾಭರಣ, ನಗದು ಹಣ, ವಾಚ್ ಹಾಗೂ ಟ್ರಾಲಿ ಬ್ಯಾಗ್ ಅನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅದೇ ರೀತಿ, ಸೆಪ್ಟೆಂಬರ್ 27ರಂದು ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಾಟ್ನ ರಸ್ತೆಯ ಮನೆಯೊಂದರ ಲಾಕರ್ ಒಡೆದು ಕಳವು ಮಾಡಲು ಯತ್ನಿಸಲಾಗಿದ್ದು, ಬೆಲೆಬಾಳುವ ವಸ್ತುಗಳು ಸಿಗದ ಕಾರಣ ಚೆಕ್ ಪುಸ್ತಕಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

24 ಗಂಟೆಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ:
ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ರಚಿಸಲಾದ ವಿಶೇಷ ತಂಡವು ಆರೋಪಿಗಳ ಚಲನವಲನದ ಬಗ್ಗೆ ತನಿಖೆ ಕೈಗೊಂಡಿತ್ತು. ಕಳವು ನಡೆಸಿದ ಬಳಿಕ ಆರೋಪಿಗಳು ರೈಲಿನಲ್ಲಿ ದೆಹಲಿಯತ್ತ ಪ್ರಯಾಣಿಸುತ್ತಿರುವುದನ್ನು ಪತ್ತೆ ಹಚ್ಚಿದ ಪೊಲೀಸರು, ಕೂಡಲೇ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದರು.

ಪೊಲೀಸರ ತಂಡವು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ, ಪ್ರಕರಣ ದಾಖಲಾದ 24 ಗಂಟೆಗಳ ಒಳಗಾಗಿ ಸೆಪ್ಟೆಂಬರ್ 29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಅಂದಾಜು 18 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ದೆಹಲಿ, ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಪ್ರಕರಣಗಳು:
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಿರುವುದು ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ಇತನ ವಿರುದ್ಧ ವಾರಂಟು ಹಾಗೂ ಪ್ರೊಕ್ಲಮೇಶನ್ ಬಾಕಿ ಇದ್ದು, ಸಂಬಂಧಪಟ್ಟ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆಯಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


Be the first to comment on "ಸರಣಿ ಕಳವು ಪ್ರಕರಣ: ಮಂಗಳೂರಲ್ಲಿ ದೆಹಲಿ ಮೂಲದ ಕುಖ್ಯಾತ ಮನೆಗಳ್ಳರ ಬಂಧನ"