ಬಂಟ್ವಾಳ

ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17ರ ವಯೋಮಾನದ ಸಾಮಾನ್ಯ ಹಾಗೂ ವಿಶೇಷ ಚೇತನ ಬಾಲಕ–ಬಾಲಕಿಯರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಅ.27 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ದೀಪ ಪ್ರಜ್ವಲಿಸುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ. ಕ್ರೀಡೆಯು ಶಿಸ್ತು, ಆತ್ಮವಿಶ್ವಾಸ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವುದರೊಂದಿಗೆ ಜೀವನದ ಸವಾಲುಗಳನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತದೆ ಎಂದರು.

VNR GOLD

ತುಂಬೆ ವಿದ್ಯಾಸಂಸ್ಥೆಯ ಸಾಧನೆಗಳನ್ನು ಶ್ಲಾಘಿಸಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಂಚಲನ ಮೂಡಿಸಿರುವ ಈ ಸಂಸ್ಥೆಯು ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಂಬೆ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ (ರಿ.) ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಸಹಕಾರ, ನಾಯಕತ್ವ, ಪರಸ್ಪರ ಗೌರವ ಮತ್ತು ಶಿಸ್ತಿನ ಗುಣಗಳನ್ನು ಬೆಳೆಸುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದರು.

ಮಂಗಳೂರು ಶಾಲಾ ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಉಪನಿರ್ದೇಶಕ ಶಶಿಧರ ಜಿ.ಎಸ್. ಅವರು ಮಾತನಾಡಿ, ಶಾಲಾ ಹಂತದಲ್ಲಿಯೇ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡುವುದು ಅಗತ್ಯವೆಂದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹಾಗೂ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ವೃದ್ಧಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲೆಯ ವಿವಿಧ ಶಾಲೆಗಳ ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಕೌಶಲ ಹಾಗೂ ಪ್ರತಿಭೆಯನ್ನು ಪ್ರದರ್ಶಿಸಿದರು. ವಿಶೇಷ ಚೇತನ ವಿದ್ಯಾರ್ಥಿಗಳ ಭಾಗವಹಿಸುವಿಕೆಯು ಕ್ರೀಡಾಕ್ಷೇತ್ರದಲ್ಲಿ ಸಮಾನ ಅವಕಾಶ, ಸಮಾನ ಗೌರವ ಮತ್ತು ಒಳಗೊಳ್ಳುವಿಕೆಯ ಮಹತ್ವವನ್ನು ಸಾರಿತು.

ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಸ್ವಾಗತಿಸಿದರು. ಬಂಟ್ವಾಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ದೈಹಿಕ ಶಿಕ್ಷಣ ಪರಿವೀಕ್ಷಕಿ ಆಶಾ ನಾಯಕ್ ವಂದಿಸಿದರು. ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವಿದ್ಯಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ತುಂಬೆ ಪದವಿಪೂರ್ವ ಕಾಲೇಜಿನ ರಕ್ಷಕ–ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ,ಪುದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ದೇವಸ್ಯ,ತುಂಬೆ ರಾಯಲ್ ಗ್ರೂಪ್ ನ ಆದಂ ಸಲಾಂ ಉಚ್ಚಿಲ, ಮೊಡಂಕಾಪು  ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ವಿಕ್ಟರ್ ಡಿಸೋಜ, ತುಂಬೆ ಪದವಿಪೂರ್ವ ಕಾಲೇಜಿನ ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್, ಪ್ರಾಂಶುಪಾಲ ದಿನೇಶ್ ಶೆಟ್ಟಿ ಅಳಿಕೆ, ಕಾಲೇಜಿನ ನಿವೃತ್ತ ಪ್ರಾಂಶುಪಾಲ ಗಂಗಾಧರ ಆಳ್ವ, ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ ಸಾಲ್ಯಾನ್, ತುಂಬೆ ಪ್ರೌಢಶಾಲೆಯ ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯಿನಿ ವಿದ್ಯಾ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯಿನಿ ಸೌಮ್ಯ, ಬ್ರಹ್ಮರಕೂಟ್ಲುವಿನ ಅನಿಲ್ ಪಂಡಿತ್, ಸದಾಶಿವ ಡಿ. ತುಂಬೆ, ರಕ್ಷಕ–ಶಿಕ್ಷಕ ಸಂಘದ ಉಪಾಧ್ಯಕ್ಷೆ ಮೋಹಿನಿ ಸುವರ್ಣ ಹಾಗೂ ಸದಸ್ಯ ಮ್ಯಾಕ್ಸಿಮ್ ಕುವೆಲ್ಲೊ  ,  ಸದಸ್ಯೆ ಚಂಚಲಾಕ್ಷಿ, ಕಾಲೇಜಿನ ಹಿರಿಯ ವಿದ್ಯಾರ್ಥಿ ಇರ್ಫಾನ್ ತುಂಬೆ, ಮಹಮ್ಮದ್ ಸಫ್ವೀರ್ ಉಪಸ್ಥಿತರಿದ್ದರು.ಜಿಲ್ಲೆಯ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ನಿರ್ದೇಶಕರು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು,ಶಿಕ್ಷಕರು ಹಾಗೂ ಉಪನ್ಯಾಸಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.