ಬಂಟ್ವಾಳ

ಬಂಟ್ವಾಳ: ನೀರು ಶುದ್ಧೀಕರಣ ಘಟಕದ ಶುದ್ಧೀಕರಣ ಆರಂಭ, ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ, ಪರಿಶೀಲನೆ

ಕಳೆದ ಕೆಲವು ಸಮಯಗಳಿಂದ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ನಿರಂತರ ದೂರುಗಳು ಕೇಳಿಬರುತ್ತಿದ್ದು, ಇದೀಗ ನೀರು ಶುದ್ಧೀಕರಣ ಘಟಕದ ಸ್ವಚ್ಛತಾ ಕಾರ್ಯಕ್ಕೆ ಪುರಸಭೆ ಆಡಳಿತ ಮುಂದಾಗಿದೆ.

ಪುರಸಭಾ ವ್ಯಾಪ್ತಿಯ ಜನರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ದೂರುಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಇತ್ತೀಚೆಗೆ ನೀರು ಶುದ್ಧೀಕರಣ ಘಟಕಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ಘಟಕದಲ್ಲಿ ಪಾಚಿ, ಕೆಸರು ಹಾಗೂ ತ್ಯಾಜ್ಯ ಸಂಗ್ರಹವಾಗಿರುವುದನ್ನು ಗಮನಿಸಿ, ಕೂಡಲೇ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಜಾಹೀರಾತು
VNR GOLD

ಈ ಸಂದರ್ಭ ಮಾತನಾಡಿದ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್, ಕಳೆದ ಎರಡು ವರ್ಷಗಳಿಂದ ಬಂಟ್ವಾಳ ಪುರಸಭಾ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ದೂರುಗಳು ಬರುತ್ತಿವೆ. ಪ್ರತಿ ಬಾರಿ ಸಮಸ್ಯೆಗಳ ಬಗ್ಗೆ ಮಾಹಿತಿ ಬಂದಾಗ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗಿದೆ. ಇದೀಗ ನೀರು ಶುದ್ಧೀಕರಣ ಘಟಕದ ಸ್ವಚ್ಛತೆಯ ಕುರಿತು ಶಾಸಕರು ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಸ್ವಚ್ಛತಾ ಕಾರ್ಯ ಆರಂಭಗೊಂಡಿದೆ ಎಂದು ತಿಳಿಸಿದರು.

ನೀರು ಶುದ್ಧೀಕರಣ ಘಟಕದ ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಮತ್ತು ಬುಧವಾರ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಪುರಸಭಾ ವ್ಯಾಪ್ತಿಯ ಸಾರ್ವಜನಿಕರು ಎರಡು ದಿನಗಳ ಕಾಲ ಸಹಕರಿಸುವಂತೆ ಅವರು ಮನವಿ ಮಾಡಿದರು.

ಕುಡಿಯುವ ನೀರು ಪ್ರತಿಯೊಂದು ಕುಟುಂಬದ ದೈನಂದಿನ ಅಗತ್ಯವಾಗಿದ್ದು, ಘಟಕದ ಸಮರ್ಪಕ ನಿರ್ವಹಣೆ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಪುರಸಭೆ ಆಡಳಿತ ಹೆಚ್ಚಿನ ಆದ್ಯತೆ ನೀಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ. ಸ್ವಚ್ಛತಾ ಕಾರ್ಯ ಪೂರ್ಣಗೊಂಡ ಬಳಿಕ ನೀರು ಪೂರೈಕೆಯ ಗುಣಮಟ್ಟ ಸುಧಾರಣೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಎ.ಇ.ಇ. ತೇಜಮೂರ್ತಿ, ಎಕ್ಸಿಕ್ಯೂಟಿವ್ ಎಂಜಿನಿಯರ್ ಪುರಂದರ, ಪ್ರಸಾದ್, ಪುರಸಭಾ ಮುಖ್ಯಾಧಿಕಾರಿ ತೀರ್ಥಪ್ರಸಾದ್, ಪುರಸಭೆಯ ಮಾಜಿ ಸದಸ್ಯರಾದ ಎ. ಗೋವಿಂದ ಪ್ರಭು, ಹರಿಪ್ರಸಾದ್, ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts