ನಿಂತಿದ್ದ ಕಾರು, ಕ್ರೇನ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಮತ್ತೊಂದು ಕಾರು: ನಾಲ್ವರಿಗೆ ಗಾಯ

ಬಂಟ್ವಾಳ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ದುರಸ್ತಿಗಾಗಿ ನಿಲ್ಲಿಸಿದ್ದ ಕ್ರೇನ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಮೆಕ್ಯಾನಿಕ್‌ಗಳು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡು–ಧರ್ಮಸ್ಥಳ ರಸ್ತೆಯ ಕಳ್ಳಿಮಾರ್‌ನಲ್ಲಿ ಶನಿವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ವಿಶ್ವನಾಥ್ ಪೂಜಾರಿ ಯಾನೆ ಮಾಧವ ಅವರ ಸೊಂಟಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ಕೈ-ಕಾಲುಗಳಿಗೆ ತರಚಿದ ಗಾಯಗಳಾಗಿವೆ.ಪುನೀತ್ ಅವರ ಕೈ-ಕಾಲುಗಳಿಗೂ ತೀವ್ರ ಸ್ವರೂಪದ ಗಾಯಗಳಾಗಿದ್ದು, ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಉಮ್ಮರಬ್ಬ ಮೊಹಮ್ಮದ್ ಹಾಗೂ ಅದರಲ್ಲಿದ್ದ ಪ್ರಯಾಣಿಕರಾದ ರೇಷ್ಮಾಬಾನು ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜಾಹೀರಾತು

ಪುಂಜಾಲಕಟ್ಟೆ ನಿವಾಸಿ ಯು. ಮಹಮ್ಮದ್ ಅವರು ತಮ್ಮ ಮಗಳನ್ನು ಕಾರಿನಲ್ಲಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ. ಬಿ.ಸಿ.ರೋಡ್ ಗಾಣದಪಡ್ಪು ಬಳಿಯ ಕಳ್ಳಿಮಾರ್‌ಎಂಬಲ್ಲಿ ಸುವರ್ಣ ಇಂಜಿನಿಯರಿಂಗ್ ಶಾಪ್ ಮುಂಭಾಗ ಈ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ಕಾರೊಂದನ್ನು ನಿಲ್ಲಿಸಿ ಚಾಲಕ ತೆರಳಿದ್ದರು. ಸಮೀಪದಲ್ಲೇ ಕ್ರೇನ್‌ವೊಂದನ್ನು ದುರಸ್ತಿಗಾಗಿ ನಿಲ್ಲಿಸಲಾಗಿತ್ತು. ಮಾಧವ ಎಂಬವರು ಕ್ರೇನ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರೆ, ಪುನೀತ್ ಎಂಬವರು ಬೈಕ್‌ನಲ್ಲಿ ಕುಳಿತು ಅವರೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ.

ಮಂಗಳೂರಿನತ್ತ ಸಾಗುತ್ತಿದ್ದ ಮಹಮ್ಮದ್ ಅವರ ಕಾರು ಮೊದಲು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಕ್ರೇನ್‌ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ನಿಲ್ಲಿಸಿದ್ದ ಕಾರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದೆ. ಅದೃಷ್ಟವಶಾತ್ ಆ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಸ್ಥಳೀಯರಿಂದ ರಕ್ಷಣೆ, ಶಾಸಕರ ನೆರವು: ಡಿಕ್ಕಿಯ ತೀವ್ರತೆಗೆ ಕ್ರೇನ್ ದುರಸ್ತಿ ಮಾಡುತ್ತಿದ್ದ ವಿಶ್ವನಾಥ ಯಾನೆ ಮಾಧವ ಹಾಗೂ ಬೈಕ್‌ನಲ್ಲಿದ್ದ ಪುನೀತ್ ವಾಹನಗಳ ನಡುವೆ ಸಿಲುಕಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹರಸಾಹಸಪಟ್ಟು ಇಬ್ಬರನ್ನೂ ಹೊರತೆಗೆದಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಯು. ಮಹಮ್ಮದ್ ಅವರಿಗೂ ಗಾಯಗಳಾಗಿವೆ.

VNR GOLD

ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಅಪಘಾತದ ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದರು. ಗಾಯಾಳುಗಳನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಿದ್ದಾರೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಿಂತಿದ್ದ ಕಾರು, ಕ್ರೇನ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಮತ್ತೊಂದು ಕಾರು: ನಾಲ್ವರಿಗೆ ಗಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*